
ಮಂಗಳೂರು, ಅಕ್ಟೋಬರ್.07: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ, ವೈಭವದ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅ.11ರಿಂದ 22ರವರೆಗೆ ನಡೆಯಲಿರುವ ಮಹೋತ್ಸವಕ್ಕೆ ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅದ್ದೂರಿ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ತಿಳಿಸಿದರು.

ಕುದ್ರೋಳಿ ಕ್ಷೇತ್ರದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಬಾರಿಯ ದಸರಾ ಮಹೋತ್ಸವ ನಡೆಯಲಿದೆ. ಅ.11ರಂದು ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅ.12ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈ ಬಾರಿ ಕುದ್ರೋಳಿ ಕ್ಷೇತ್ರವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಭವ್ಯ ದರ್ಬಾರ್ ಮಂಟಪವನ್ನು ಅರಮನೆ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ಮೂರ್ತಿಗಳನ್ನು ಇಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಆರಾಧನೆ ನೆರವೇರಿಸಲಾಗುತ್ತದೆ. ಭಜನೆ, ನೃತ್ಯ, ಸಂಗೀತ, ಕ್ರೀಡಾಕೂಟಗಳು ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳ ಪ್ರದರ್ಶನ ಉತ್ಸವಕ್ಕೆ ಮೆರುಗು ನೀಡಲಿದೆ.

ಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಲಿದೆ. ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಆಯೋಜಿಸಲಾಗಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರಿಗೂ ಚಂಡಿಕಾಹೋಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ಪ್ರತಿದಿನ ಮಧ್ಯಾಹ್ನ 2.30ರಿಂದ ರಾತ್ರಿ 11.30ರವರೆಗೆ ‘ದಸರಾ ಕಲಾಝೇಂಕಾರ’ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ. ಇದೇ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಪ್ರತಿದಿನ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಅ.12ರಂದು ರಾಜ್ಯಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆಗಳು ನಡೆಯಲಿವೆ. ಅ.13ರಂದು ಸಂಜೆ 7.30ರಿಂದ ‘ರುದ್ರತಾಂಡವಮ್’ ರಾಜ್ಯಮಟ್ಟದ ಭಕ್ತಿಪ್ರಧಾನ ಸಮೂಹ ನೃತ್ಯ ಸ್ಪರ್ಧೆ ಸೀಸನ್-2 ಆಯೋಜಿಸಲಾಗಿದೆ.
ಮಕ್ಕಳಿಗಾಗಿ ಅ.15ರಂದು ‘ಮಕ್ಕಳ ದಸರಾ’ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಭಕ್ತಿಗೀತೆ, ಚಿತ್ರಕಲೆ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಗಳು ನಡೆಯಲಿವೆ. ಅ.16ರಂದು ‘ಮುದ್ದು ಶಾರದೆ’ ಸ್ಪರ್ಧೆ, ಅ.18ರಂದು ದಸರಾ ಮ್ಯಾರಥಾನ್ ಎಡಿಷನ್-4 ಹಾಗೂ ‘ಕಿನ್ನಿಪಿಲಿ’ ಸೀಸನ್-2 ನಡೆಯಲಿದೆ.

ಅ.19ರಂದು ಮಹಿಳೆಯರಿಗಾಗಿ ‘ಮಹಿಳಾ ದಸರಾ’ ಆಯೋಜಿಸಲಾಗಿದ್ದು, ಭರತನಾಟ್ಯ, ಬೆಂಕಿ ರಹಿತ ಅಡುಗೆ, ರಂಗೋಲಿ, ಮೆಹಂದಿ, ಸಮೂಹ ಗಾಯನ ಹಾಗೂ ಹೂ ಕಟ್ಟುವ ಸ್ಪರ್ಧೆಗಳು ನಡೆಯಲಿವೆ. ರಾತ್ರಿ 8 ಗಂಟೆಗೆ ಮಹಿಳೆಯರಿಂದ ಸಮೂಹ ಗರ್ಭಾ-ದಾಂಡಿಯಾ ನೃತ್ಯವೂ ನಡೆಯಲಿದೆ. ಅ.20ರಂದು ‘ದಸರಾ ರಂಗಾಂತರಂಗ’ ಹೆಸರಿನಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

ಅ.20ರಂದು ಬೆಳಗ್ಗೆ 9 ಗಂಟೆಗೆ ಶಾರದಾ ಮಾತೆಯ ಮಡಿಲಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅ.21ರಂದು ಐತಿಹಾಸಿಕ ದಸರಾ ಶೋಭಾಯಾತ್ರೆ:
ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಐತಿಹಾಸಿಕ ದಸರಾ ಶೋಭಾಯಾತ್ರೆ ಅ.21ರಂದು ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆರಂಭವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿರುವ ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು, ಸ್ತಬ್ಧಚಿತ್ರಗಳು ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ಮೆರವಣಿಗೆ ಪ್ರಮುಖ ಆಕರ್ಷಣೆಯಾಗಲಿದೆ.
ಈ ಬಾರಿ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್‌ಗೆ ಅವಕಾಶ ಇರುವುದಿಲ್ಲ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಸಾಂಪ್ರದಾಯಿಕ ಕಲಾ ತಂಡಗಳು, ವಾದ್ಯಮೇಳಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳಿಗೆ ಆದ್ಯತೆ ನೀಡಲಾಗಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ಅನುಗುಣವಾಗಿ ಶೋಭಾಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪದ್ಮರಾಜ್ ಅವರು ಸಂಪೂರ್ಣ ವಿವರ ನೀಡಿದರು.

ನವರಾತ್ರಿ ದಿನಗಳಲ್ಲಿ ನಡೆಯಲಿರುವ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳಿಗೆ ಕ್ಷೇತ್ರದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದಸರಾ ಮಹೋತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.


ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಜಯರಾಜ್ ಸೋಮಸುಂದರ್ ಸ್ವಾಗತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿ ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಚಿತ್ತರಂಜನ್ ಗರೋಡಿ, ಹರಿಕೃಷ್ಣ ಬಂಟ್ವಾಳ್, ಚಂದನ್‌ದಾಸ್, ರಾಧಾಕೃಷ್ಣ, ಲೀಲಾಕ್ಷ ಕರ್ಕೇರ, ಜತಿನ್ ಅತ್ತಾವರ, ವಾಸುದೇವ ಕೋಟ್ಯಾನ್, ಲತೀಶ್ ಸುವರ್ಣ, ಪ್ರವೀಣ್ ದಂಡೆಕೇರಿ ಮೊದಲಾದವರಿದ್ದರು.
_Sathish Kapikad



