
ಮಂಗಳೂರು, ಅ. 25: ವಿಶ್ವ ಪೋಲಿಯೋ ದಿನಾಚರಣೆಯ ಅಂಗವಾಗಿ ರೋಟರಿ ಜಿಲ್ಲೆ 3181 ಆಯೋಜಿಸಿದ ಜಿಲ್ಲಾ ಮಟ್ಟದ ಪೋಲಿಯೋ ಜಾಗೃತಿ ಜಾಥಾವನ್ನು ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಜಯಂತಿ ಅವರು ಉದ್ಘಾಟಿಸಿದರು.
ಸುಮಾರು 35 ವರ್ಷಗಳ ಕಾಲ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಆರೋಗ್ಯ ಇಲಾಖೆಯಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಂತಿ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಅವರು, ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಪ್ರಾಥಮಿಕ ಆರೋಗ್ಯ ಸಹಾಯಕರ ಸೇವೆ ಅನನ್ಯವಾಗಿದೆ ಎಂದು ಹೇಳಿದರು.
ಪೋಷಕರಲ್ಲಿ ಅರಿವು ಮೂಡಿಸುವುದರಿಂದ ಹಿಡಿದು, ಆರೋಗ್ಯ ಇಲಾಖೆಯ ಲಸಿಕಾ ಅಭಿಯಾನಗಳಿಗೆ ಸಹಕರಿಸುವವರೆಗೆ ಅವರು ನಿರ್ವಹಿಸುವ ಜವಾಬ್ದಾರಿ ಪೋಲಿಯೋ ನಿರ್ಮೂಲನೆಯ ಪ್ರಯತ್ನಗಳಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.
ಪೋಲಿಯೋ ಮುಕ್ತ ಜಗತ್ತಿನ ಸಂಕಲ್ಪವನ್ನು ಸಾಕಾರಗೊಳಿಸಲು ಸರ್ಕಾರ, ಆರೋಗ್ಯ ಕಾರ್ಯಕರ್ತರು, ಸ್ವಯಂಸೇವಾ ಸಂಸ್ಥೆಗಳು ಮತ್ತು ಸಾರ್ವಜನಿಕರು ನಿರಂತರವಾಗಿ ಕೈಜೋಡಿಸಬೇಕು. ಯಾವುದೇ ಮಗುವೂ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ವಿಕ್ರಮದತ್ತಾ, ರೋಟರಿ ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ರೋಟರಿ ಜಿಲ್ಲೆ 3181 ವತಿಯಿಂದ ಪೋಲಿಯೋ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ನಡೆಯುತ್ತಿದೆ.
_Sathish Kapikad


