ನಾಳೆ ಪ್ರಧಾನಮಂತ್ರಿಗಳಿಂದ ಬೆಂಗಳೂರು– ಮಂಗಳೂರು– ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ಹಾಗೂ ವಿವಿಧ ರೈಲ್ವೆ ಯೋಜನೆಗಳ ಲೋಕಾರ್ಪಣೆ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರು/ ಮಂಗಳೂರು. ನವೆಂಬರ್.12: ಭಾರತೀಯ ರೈಲ್ವೆಯು ಆಧುನಿಕ ರೈಲು ಸೇವೆಗಳ ಪರಿಚಯ, ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ರೈಲ್ವೆ ಮಾರ್ಗಗಳ ಸಾಮರ್ಥ್ಯ ವೃದ್ಧಿಯ ಮೂಲಕ ಕರ್ನಾಟಕದ ರೈಲ್ವೆ ಮೂಲಸೌಕರ್ಯ ಮತ್ತು ಪ್ರಯಾಣಿಕರ ಸಂಪರ್ಕ ವ್ಯವಸ್ಥೆಯನ್ನು ನಿರಂತರವಾಗಿ ಬಲಪಡಿಸುತ್ತಿದೆ.

ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ವ್ಯವಸ್ಥೆ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವ ಮಹತ್ವದ ಉಪಕ್ರಮವಾಗಿ, 2026ರ ನವೆಂಬರ್ 13ರಂದು ಮಧ್ಯಾಹ್ನ 12.00 ಗಂಟೆಗೆ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದು, ವಿವಿಧ ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಈ ಸಂದರ್ಭದಲ್ಲಿ ಉದ್ಘಾಟನೆಗೊಳ್ಳಲಿರುವ ಪ್ರಮುಖ ರೈಲ್ವೆ ಯೋಜನೆಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನಾಲ್ಕು ರೈಲು ನಿಲ್ದಾಣಗಳಾದ ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಚಿಕ್ಕಮಗಳೂರು ಮತ್ತು ಚಾಮರಾಜನಗರ ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳು ಹಾಗೂ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಸೇರಿವೆ.

ಇದೇ ಸಂದರ್ಭದಲ್ಲಿ, ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಇದರ ಅಂಗವಾಗಿ, 2026ರ ನವೆಂಬರ್ 13ರಂದು ಮಧ್ಯಾಹ್ನ 12.00 ಗಂಟೆಗೆ ಕರ್ನಾಟಕದ ವಿವಿಧ ರೈಲು ನಿಲ್ದಾಣಗಳಲ್ಲಿ ಏಕಕಾಲದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳೂರು ಜಂಕ್ಷನ್‌ನಲ್ಲಿ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕೈಗೊಂಡಿರುವ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು ಹಾಗೂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಲಾಗುವುದು.

ಚಾಮರಾಜನಗರ ಮತ್ತು ಚಿಕ್ಕಮಗಳೂರು ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು. ಕಬಕ ಪುತ್ತೂರು ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಲಾಗುವುದು.

ಈ ಯೋಜನೆಗಳು ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪರಿಚಯವು ವೇಗವಾದ, ಆರಾಮದಾಯಕ ಮತ್ತು ಆಧುನಿಕ ಪ್ರಯಾಣದ ಅನುಭವವನ್ನು ಒದಗಿಸಲಿದ್ದು, ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ರೈಲು ಮಾರ್ಗದ ವಿದ್ಯುದೀಕರಣವು ಪ್ರಯಾಣಿಕರ ಸೌಲಭ್ಯಗಳು, ರೈಲು ಕಾರ್ಯಾಚರಣೆಯ ದಕ್ಷತೆ ಮತ್ತು ರೈಲ್ವೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲಿದೆ.

ಸುರಕ್ಷಿತ, ದಕ್ಷ, ಆಧುನಿಕ ಹಾಗೂ ಪ್ರಯಾಣಿಕ ಸ್ನೇಹಿ ರೈಲ್ವೆ ಸೇವೆಗಳನ್ನು ಒದಗಿಸುವ ಭಾರತೀಯ ರೈಲ್ವೆಯ ನಿರಂತರ ಬದ್ಧತೆಯನ್ನು ಈ ಕಾರ್ಯಕ್ರಮಗಳು ಪ್ರತಿಬಿಂಬಿಸಲಿವೆ.

ಗಿರೀಶ ಧರ್ಮರಾಜ ಕಲಗೊಂಡ

ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ

ಸಾರ್ವಜನಿಕ ಸಂಪರ್ಕ ಅಧಿಕಾರಿ

ಮೈಸೂರು ವಿಭಾಗ

 

Sathish Kapikad 

Share.
Leave A Reply

Exit mobile version