
ಮಂಗಳೂರು, ನವೆಂಬರ್ .13: ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ಸನ್ಮಾನ ನಡೆಯಲಿದೆ.
ಶುಕ್ರವಾರ ಎಸ್.ಸಿ.ಡಿ.ಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು” ಎಂಬ ವಿಷಯದಡಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದವರು ವಿವರಿಸಿದರು.
ಸಹಕಾರ ಸಚಿವರಿಂದ ಉದ್ಘಾಟನೆ:
ಕಾರ್ಯಕ್ರಮವನ್ನು ಸಹಕಾರಿ ಸಚಿವ ಲಕ್ಷಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಫರೀದ್ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಉತ್ತಮ ಸಹಕಾರಿ ಸಂಘಗಳಿಗೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ ದೇವೇಗೌಡ ಪ್ರಶಸ್ತಿ ವಿತರಿಸಿದ್ದಾರೆ.
ಉತ್ತಮ ಸ್ವಸಹಾಯ ಸಂಘಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ನೀಡಲಿದ್ದು, ವಸ್ತುಪ್ರದರ್ಶನ ಮಳಿಗೆಗಳನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣ ವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಲಿದ್ದಾರೆ. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅತ್ಯುತ್ತಮ ಕೃಷಿ ಪತ್ತಿನ, ಮಹಿಳಾ, ಹೈನುಗಾರಿಕೆ, ಮೀನುಗಾರಿಕೆ, ಕ್ರೆಡಿಟ್ ಹಾಗೂ ಸೌಹಾರ್ದ ಸಹಕಾರಿ ಸಂಘಗಳು ಮತ್ತು ಶತಮಾನೋತ್ಸವ ಪೂರೈಸಿದ ಸಂಘಗಳನ್ನೂ ಸನ್ಮಾನಿಸಲಾಗುವುದು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಸಾವಿರಕ್ಕೂ ಅಧಿಕ ನವೋದಯ ಸ್ವಸಹಾಯ ಗುಂಪುಗಳು ಕಾರ್ಯನಿರ್ವಹಿಸುತ್ತಿದ್ದು, ಬಡಜನರ ಆರ್ಥಿಕ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಅತ್ಯುತ್ತಮ ಸ್ವಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು.
ಇದೇ ಸಂದರ್ಭದಲ್ಲಿ ಪತ್ರಿಕಾ ರಂಗದ ಒಬ್ಬ ಸಾಧಕರನ್ನು ಹಾಗೂ ಮೂಡುಬಿದಿರೆ ತರಬೇತಿ ಕೇಂದ್ರದಲ್ಲಿ ಯಾಂಕ್ ವಿಜೇತರಾದ ಇಬ್ಬರನ್ನು ಗುರುತಿಸಿ ಗೌರವಿಸಲಾಗುವುದು ಎಂದು ಡಾ. ಎಂ ಎನ್ ಆರ್ ತಿಳಿಸಿದರು.
ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ
ಈ ಬಾರಿಯ ಸಹಕಾರ ಸಪ್ತಾಹದ ಸಂದರ್ಭದಲ್ಲಿ ಜಾಕೆ ಮಾಧವ ಗೌಡ, ಕಲ್ಲಡ್ಕ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟರಿ, ವಸಂತ್ ಬರ್ನಾಡ್ ಹಾಗೂ ಬೆಳ್ವೆ ಜಯರಾಮ್ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸ.
ಇದರ ಜೊತೆಗೆ 2025-26ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿರುವ ನಾಲ್ಕು ಸಹಕಾರಿ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯೊಂದಿಗೆ ತಲಾ 5 ಗ್ರಾಂ ಚಿನ್ನದ ಪದಕ, 10 ಸಾವಿರ ರೂ. ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಭವಿಷ್ಯದ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ರೂಪಿಸುವುದು ಸಹಕಾರ ಸಪ್ತಾಹದ ಮುಖ್ಯ ಉದ್ದೇಶ ವಾಗಿದೆ ಎಂದು ಡಾ. ಎಂ ಎನ್ ಆರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿ.ಸೋಜಾ, ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಹಾಗೂ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಭಾಗವಹಿಸಲಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಬ್ಯಾಂಕಿನ ಸಿ ಇ ಓ ಗೋಪಾಲಕೃಷ್ಣ ಭಟ್, ನಿರ್ದೇಶಕ ಜಯರಾಜ್ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಮತ್ತಿತ್ತರ ಪ್ರಮುಖರು ಉಪಸ್ಥಿತರಿದ್ದರು.
Sathish Kapikad